Life StyleNews

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಂಭ್ರಮ

ಮೈಸೂರು :- ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮೈಸೂರು ಇಲ್ಲಿ ದಿನಾಂಕ 27.01.2026 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ದೇಶದ ಇತಿಹಾಸದಲ್ಲಿ ಮಹಿಳಾ ಸಬಲೀಕರಣಕ್ಕೆ ಮಹತ್ವದ ತಿರುವು ನೀಡಿದ ದಿನವೆಂದರೆ 1966 ರಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರು ದೇಶದ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ. ಈ ಐತಿಹಾಸಿಕ ಸಂದರ್ಭವನ್ನು ಸ್ಮರಿಸುವ ಉದ್ದೇಶದಿಂದ ಹಾಗೂ ಮಹಿಳೆಯರ ಸಾಧನೆ, ಹಕ್ಕುಗಳು ಮತ್ತು ಸಬಲೀಕರಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ಭಾರತ ಸರ್ಕಾರವು ಈ ದಿನವನ್ನು ರಾಷ್ಟ್ರವ್ಯಾಪಿಯಾಗಿ ಮಹಿಳಾ ಸಬಲೀಕರಣದ ಸಂಕೇತ ದಿನವನ್ನಾಗಿ ಘೋಷಿಸಿ, 2008ರಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಿಕೊಂಡು ಬರುತ್ತಿದೆ. ಪ್ರಸ್ತುತ ಸಮಾಜದಲ್ಲಿ ಹೆಣ್ಣು ಮಕ್ಕಳು ಶಿಕ್ಷಣ, ಆರೋಗ್ಯ, ಪೋಷಣೆ, ಭದ್ರತೆ ಹಾಗೂ ಸಮಾನ ಹಕ್ಕುಗಳ ವಿಷಯದಲ್ಲಿ ಎದುರಿಸುತ್ತಿರುವ ಅನೇಕ ಅಸಮಾನತೆಗಳು ಮತ್ತು ಸವಾಲುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ. ವಿಶೇಷವಾಗಿ ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಹೆಚ್ಚಿಸುವುದು, ಸ್ತ್ರೀ ಶಿಕ್ಷಣದ ಮಹತ್ವವನ್ನು ಒತ್ತಿಹೇಳುವುದು, ಹೆಣ್ಣು ಮಕ್ಕಳ ಆರೋಗ್ಯ ಮತ್ತು ಪೋಷಣೆಯ ಅಗತ್ಯತೆಯನ್ನು ಜನಸಾಮಾನ್ಯರಿಗೆ ತಲುಪಿಸುವುದು ಈ ಕಾರ್ಯಕ್ರಮದ ಮುಖ್ಯ ಆಶಯವಾಗಿತ್ತು. ಈ ಹಿನ್ನೆಲೆಯಲ್ಲಿ “ಹೆಣ್ಣು ಮಗುವನ್ನು ಉಳಿಸೋಣ” ಎಂಬ ಸಂದೇಶದೊಂದಿಗೆ ಹೆಣ್ಣು ಮಕ್ಕಳ ವಿರುದ್ಧ ನಡೆಯುತ್ತಿರುವ ಭೇದಭಾವ, ಕುಸಿಯುತ್ತಿರುವ ಲಿಂಗ ಅನುಪಾತ ಮತ್ತು ಬಾಲಕಿಯರ ಮೇಲಿನ ಅನ್ಯಾಯಗಳ ಬಗ್ಗೆ ಚರ್ಚಿಸಲಾಯಿತು. ಜೊತೆಗೆ ಹೆಣ್ಣು ಮಕ್ಕಳಿಗೆ ಆರೋಗ್ಯಕರ, ಸುರಕ್ಷಿತ ಹಾಗೂ ಗೌರವಪೂರ್ಣ ವಾತಾವರಣವನ್ನು ನಿರ್ಮಿಸುವ ಹೊಣೆಗಾರಿಕೆ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂಬ ಸಂದೇಶವನ್ನು ನೀಡಲಾಯಿತು. ಈ ದಿನಾಚರಣೆಯ ಅಂಗವಾಗಿ ಸಮುದಾಯ ಮಟ್ಟದಲ್ಲಿ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳ ಲಿಂಗ ಅನುಪಾತ ಸುಧಾರಣೆ, ಬಾಲಕಿಯರ ಶಿಕ್ಷಣಕ್ಕೆ ಉತ್ತೇಜನ, ಬಾಲ್ಯವಿವಾಹ ತಡೆ ಹಾಗೂ ಪೋಷಣೆಯ ಮಹತ್ವದ ಕುರಿತು ಮಾಹಿತಿ ನೀಡಲಾಯಿತು.

“ಉಜ್ವಲವಾದ ನಾಳೆಗಾಗಿ ಹೆಣ್ಣುಮಕ್ಕಳ ಸಬಲೀಕರಣ” ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಪಿ.ಸಿ. ಅವರು ಮಾತನಾಡಿ, ಹೆಣ್ಣು ಮಕ್ಕಳು ಶಿಕ್ಷಣ ಮತ್ತು ಆರೋಗ್ಯದಲ್ಲಿ ಬಲಿಷ್ಠರಾಗಿದ್ದರೆ ಮಾತ್ರ ಸಮಾಜ ಪ್ರಗತಿಯ ಹಾದಿಯಲ್ಲಿ ಸಾಗಲು ಸಾಧ್ಯ ಎಂದು ತಿಳಿಸಿದರು. ಅವರು ಹೆಣ್ಣು ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತು ವಿವರಿಸಿ, ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ವಿವಿಧ ವಿಭಾಗಗಳ ಆರೋಗ್ಯಾಧಿಕಾರಿಗಳು, ವೈದ್ಯರು, ನರ್ಸ್‌ಗಳು ಹಾಗೂ ಇತರೆ ಆರೋಗ್ಯ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿ, ಹೆಣ್ಣು ಮಕ್ಕಳ ಸಬಲೀಕರಣದ ಮಹತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ರೀತಿಯಾಗಿ ಮೈಸೂರು ಜಿಲ್ಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಸಾಮಾಜಿಕ ಜವಾಬ್ದಾರಿಯ ಅರಿವಿನೊಂದಿಗೆ ಯಶಸ್ವಿಯಾಗಿ ಆಚರಿಸಲಾಯಿತು.

Leave a Response