HOMENews

ಪ್ರೀತಿ ಮದುವೆಗೆ ವಿರೋಧ: ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ ? ಎಲ್ಲವೂ ಭಸ್ಮ

ಮಂಡ್ಯ, ಫೆ.21: ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶಗೊಂಡ ಮಾವನೊಬ್ಬ ಅಳಿಯನ ಮನೆಗೆ ಬೆಂಕಿ ಹಚ್ಚಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚುಂಚಗಹಳ್ಳಿ ಗ್ರಾಮದ ವಿನೋದ್ ಹಾಗೂ ಕಾವ್ಯಾ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇತ್ತೀಚೆಗೆ ಕುಟುಂಬದವರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಕಾವ್ಯಾ ಮನೆಯವರು ಈ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಕಳೆದ ಗುರುವಾರ ಈ ಜೋಡಿ ಮದುವೆಯಾಗಿದ್ದು, ಮದುವೆಯ ನಂತರ ಗ್ರಾಮದಲ್ಲೇ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮಗಳ ಮದುವೆಯಿಂದ ಆಕ್ರೋಶಗೊಂಡಿದ್ದ ಕಾವ್ಯಾ ತಂದೆ ಚನ್ನೇಗೌಡ ಶನಿವಾರ ಬೆಳಿಗ್ಗೆ ಅಳಿಯ ವಿನೋದ್ ಅವರ ಮನೆಗೆ ಹೋಗಿ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಬೆಂಕಿ ವೇಗವಾಗಿ ಹಬ್ಬಿದ ಪರಿಣಾಮ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ಉಪಕರಣಗಳು, ಬಟ್ಟೆಬರೆ, ಗೃಹೋಪಯೋಗಿ ಸಾಮಗ್ರಿಗಳು ಹಾಗೂ ಅಡುಗೆ ಸಾಮಾನುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ವಿನೋದ್ ಹಾಗೂ ಕಾವ್ಯಾ ಮನೆಯಲ್ಲಿ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯರು ಬೆಂಕಿ ಕಾಣುತ್ತಿದ್ದಂತೆಯೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲವಾದರೆ ಬೆಂಕಿ ಪಕ್ಕದ ಮನೆಗಳಿಗೂ ಹಬ್ಬುವ ಸಾಧ್ಯತೆ ಇತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮನೆಗೆ ಬೆಂಕಿ ಹಚ್ಚುವ ವೇಳೆ ಆರೋಪಿ ಚನ್ನೇಗೌಡನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಪ್ರೀತಿ ಮದುವೆ ಹಿನ್ನೆಲೆ ಉಂಟಾದ ಕುಟುಂಬ ಕಲಹವೇ ಈ ಘಟನೆಗೆ ಕಾರಣವಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಗ್ರಾಮದಲ್ಲಿ ಈ ಘಟನೆ ಆತಂಕ ಮೂಡಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Leave a Response