HOMENews

ಅಂಬೇಡ್ಕರ್ ಪ್ರಶಸ್ತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು, ಮಾ. 7 : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ ರಾಂ ಹಾಗೂ ಏಪ್ರಿಲ್ 14 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗಳನ್ನು ಆಚರಿಸುವ ಅಂಗವಾಗಿ ವಿಶೇಷ ಪ್ರಶಸ್ತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಗುರುತಿಸಿ, ರಾಜ್ಯ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಪ್ರಶಸ್ತಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಈ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೊದಲು ಮಾರ್ಚ್ 10, 2026 ಎಂದು ನಿಗದಿಪಡಿಸಲಾಗಿತ್ತು. ಆದರೆ ಹೆಚ್ಚಿನ ಅರ್ಜಿದಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈಗ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 15, 2026ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 15ರೊಳಗೆ ಸಮಾಜ ಕಲ್ಯಾಣ ಇಲಾಖೆಯ ಕೇಂದ್ರ ಕಚೇರಿ ಅಥವಾ ತಮ್ಮ ಸಂಬಂಧಿತ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಗಳಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply