ಅಮೃತ ವಿಶ್ವವಿದ್ಯಾಪೀಠದಲ್ಲಿ ‘ಸದ್ಗಮಯ–2026’ ಉತ್ಸವಕ್ಕೆ ಭರ್ಜರಿ ಚಾಲನೆ
ಸಂತ ಜೋಸಫರ ಪ್ರಥಮ ದರ್ಜೆ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ
ಮೈಸೂರು, ಮಾ.13: ವಿದ್ಯಾರ್ಥಿ ಜೀವನವು ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಅತ್ಯಂತ ಪ್ರಮುಖ ಹಂತವಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡರೆ ಯಾವುದೇ ಕ್ಷೇತ್ರದಲ್ಲಾದರೂ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಶರಣಪ್ಪ ವೈಜನಾಥ ಹಲಸೆ ಅಭಿಪ್ರಾಯಪಟ್ಟರು.
ನಗರದ ಬೋಗಾದಿಯಲ್ಲಿರುವ ಅಮೃತ ವಿಶ್ವವಿದ್ಯಾಪೀಠಂ ಮೈಸೂರು ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ ‘ಸದ್ಗಮಯ–2026’ ಬಹುಪ್ರಕಾರದ ಅಂತರಕಾಲೇಜು ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮೊಳಗಿನ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಉತ್ಸವಗಳು ಅತ್ಯುತ್ತಮ ವೇದಿಕೆಯಾಗುತ್ತವೆ. ಪ್ರತಿಯೊಬ್ಬರಿಗೂ ದಿನಕ್ಕೆ 24 ಗಂಟೆಗಳ ಸಮಯ ದೊರೆಯುತ್ತದೆ. ಆದರೆ ಆ ಸಮಯವನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದೇ ನಮ್ಮ ಜೀವನದ ಯಶಸ್ಸನ್ನು ನಿರ್ಧರಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನ, ಕೌಶಲ್ಯಾಭಿವೃದ್ಧಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಮೀಸಲಿಡಬೇಕು ಎಂದು ಅವರು ಸಲಹೆ ನೀಡಿದರು.
ವಿದ್ಯಾರ್ಥಿಗಳು ತಮ್ಮ ಪೋಷಕರು ಹಾಗೂ ಶಿಕ್ಷಕರಿಗೆ ಸದಾ ಗೌರವ ನೀಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಅನೇಕ ತ್ಯಾಗಗಳನ್ನು ಮಾಡುತ್ತಾರೆ. ಅವರ ಪರಿಶ್ರಮವನ್ನು ಮನದಟ್ಟು ಮಾಡಿಕೊಂಡು ವಿದ್ಯಾರ್ಥಿಗಳು ಅವರ ಕನಸುಗಳನ್ನು ಸಾಕಾರಗೊಳಿಸಲು ಶ್ರಮಿಸಬೇಕು ಎಂದು ಹೇಳಿದರು.

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಬಾಲ್ಯದಲ್ಲಿ ಪತ್ರಿಕೆ ಹಂಚುವ ಕೆಲಸ ಮಾಡುತ್ತಿದ್ದರೂ ಪರಿಶ್ರಮ ಮತ್ತು ದೃಢಸಂಕಲ್ಪದಿಂದ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದರು. ವಿದ್ಯಾರ್ಥಿಗಳು ಇಂತಹ ಮಹನೀಯರ ಜೀವನದಿಂದ ಪ್ರೇರಣೆ ಪಡೆದು ತಮ್ಮ ಗುರಿಗಳನ್ನು ಸಾಧಿಸಲು ಮುಂದಾಗಬೇಕು ಎಂದು ಅವರು ಹೇಳಿದರು.
ಉತ್ತಮ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು ಮತ್ತು ಸಮಾಜದತ್ತ ಹೊಣೆಗಾರಿಕೆ ಬೆಳೆಸಿಕೊಳ್ಳುವುದು ಅಗತ್ಯ. ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್ ಹಾಗೂ ಇತರ ವ್ಯತ್ಯಯಗಳನ್ನು ನಿಯಂತ್ರಿಸಿಕೊಂಡು ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಕೇವಲ ಇಂದಿನ ದಿನದ ಬಗ್ಗೆ ಮಾತ್ರ ಯೋಚಿಸದೆ ಮುಂದಿನ 30 ರಿಂದ 35 ವರ್ಷಗಳ ಜೀವನವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಪರಿಶ್ರಮ, ಶಿಸ್ತು ಮತ್ತು ದೃಢಸಂಕಲ್ಪ ಇದ್ದರೆ ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ರೀಡೆ, ಸಾಂಸ್ಕೃತಿಕ ಮತ್ತು ಜ್ಞಾನಾಧಾರಿತ ಸ್ಪರ್ಧೆಗಳು ನಡೆದವು. ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 25 ಕಾಲೇಜುಗಳಿಂದ 700 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸಿದರು.
ಉತ್ಸವದಲ್ಲಿ ಒಟ್ಟು ಅಂಕಗಳ ಆಧಾರದಲ್ಲಿ ನಗರದ ಸಂತ ಜೋಸಫರ ಪ್ರಥಮ ದರ್ಜೆ ಕಾಲೇಜು ಸಮಗ್ರ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಬ್ರಹ್ಮಚಾರಿ ಅನಂತಾನಂದ ಚೈತನ್ಯ, ಅಸೋಸಿಯೇಟ್ ಡೀನ್ ಪ್ರೊ. ಶೇಖರ್ ಬಾಬು, ಪ್ರಾಂಶುಪಾಲರಾದ ಪ್ರೊ. ಜಿ. ರವೀಂದ್ರನಾಥ್, ಶೈಕ್ಷಣಿಕ ಸಂಯೋಜಕರಾದ ಡಾ. ರೇಖಾ ಭಟ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.









