
ವರದಿ: ವಡ್ಡರಕೊಪ್ಪಲು ಶಿವರಾಮ್
ಮೈಸೂರು, ಮಾ.12: ಜಮೀನಿನ ಖಾತೆ ಮಾಡಿಕೊಡುವಲ್ಲಿ ವಿಳಂಬವಾಗಿದ್ದರಿಂದ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ಗ್ರಾಮದ ರೈತ ರಂಗೇಗೌಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ತಕ್ಷಣ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಭ್ಯವಾದ ಮಾಹಿತಿಯ ಪ್ರಕಾರ, ಚಿಕ್ಕನಾಯಕನಹಳ್ಳಿ ಗ್ರಾಮದ ನಿವಾಸಿಯಾಗಿರುವ ರಂಗೇಗೌಡ ಅವರು ತಮ್ಮ ಜಮೀನಿನ ಖಾತೆ ಮಾಡಿಸಿಕೊಳ್ಳಲು ಸಾಲಿಗ್ರಾಮ ನಾಡ ಕಚೇರಿಗೆ ಹಲವು ಬಾರಿ ಭೇಟಿ ನೀಡಿದ್ದರು. ಆದರೆ ಖಾತೆ ಪ್ರಕ್ರಿಯೆ ನಿರಂತರವಾಗಿ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ರೈತ ಮನಸ್ಸಿಗೆ ಬೇಸರಗೊಂಡು ನಾಡ ಕಚೇರಿ ಸಮೀಪವೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ತಿಳಿದ ಕೂಡಲೇ ಸ್ಥಳೀಯರು ಮತ್ತು ಅಧಿಕಾರಿಗಳು ರಂಗೇಗೌಡ ಅವರನ್ನು ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದರು. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಈ ವಿಷಯ ತಿಳಿದು ಮಾಜಿ ಸಚಿವ ಹಾಗೂ ಕೆ.ಆರ್.ನಗರ ಕ್ಷೇತ್ರದ ಮಾಜಿ ಸಚಿವ ಸಾ.ರಾ. ಮಹೇಶ್ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ರಂಗೇಗೌಡ ಅವರ ಆರೋಗ್ಯ ವಿಚಾರಿಸಿದರು. ರೈತನೊಂದಿಗೆ ಮಾತನಾಡಿ ಆತ್ಮಸ್ಥೈರ್ಯ ತುಂಬಿದ ಅವರು, ಯಾವುದೇ ಸಮಸ್ಯೆಯಿಂದ ಮನನೊಂದು ಇಂತಹ ಕ್ರಮಕ್ಕೆ ಮುಂದಾಗಬಾರದು ಎಂದು ಸಲಹೆ ನೀಡಿದರು.
ಇದೇ ವೇಳೆ ರೈತನ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಬೇಗ ಪರಿಹಾರ ಕಂಡುಹಿಡಿಯುವುದಾಗಿ ಭರವಸೆ ನೀಡಿದರು. ಜೊತೆಗೆ ಜಮೀನಿನ ಖಾತೆ ಸೇರಿದಂತೆ ರೈತರ ಆಡಳಿತಾತ್ಮಕ ಕೆಲಸಗಳು ವಿಳಂಬವಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ಘಟನೆ ಗ್ರಾಮೀಣ ಪ್ರದೇಶಗಳಲ್ಲಿ ರೈತರು ಎದುರಿಸುತ್ತಿರುವ ಆಡಳಿತಾತ್ಮಕ ತೊಂದರೆಗಳತ್ತ ಮತ್ತೊಮ್ಮೆ ಗಮನ ಸೆಳೆದಿದ್ದು, ಸಂಬಂಧಿಸಿದ ಇಲಾಖೆಗಳು ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡುವ ಅಗತ್ಯವಿದೆ ಎಂಬ ಮಾತು ಕೇಳಿಬರುತ್ತಿದೆ.





