
ಮೈಸೂರು, ಫೆ.27: ರಾಜ್ಯ ಸರ್ಕಾರ 2026ನೇ ಸಾಲಿನ ಬಜೆಟ್ ಮಂಡನೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಅಭಿವೃದ್ಧಿ ಆದ್ಯತೆಗಳ ಕುರಿತು ಪ್ರಜ್ಞಾವಂತ ಮತದಾರರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಮೈಸೂರು ಜಿಲ್ಲೆಯ ನಾಗರಿಕರು ಅಭಿಪ್ರಾಯಪಟ್ಟರು.
ನಗರದಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಮುಖಂಡರು, ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆಡಳಿತದಲ್ಲಿ ಸ್ಥಿರತೆ ಕಾಣಿಸದೆ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಗುಂಪುಗಾರಿಕೆ, ಪದೇಪದೇ ದೆಹಲಿಗೆ ಭೇಟಿ, ಹಾಗೂ ವಿವಿಧ ನಿಗಮ ಮಂಡಳಿಗಳಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವುದಾಗಿ ಆರೋಪಿಸಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಖಜಾನೆ ಮೇಲೆ ಹೆಚ್ಚಿನ ಹೊರೆ ಬಿದ್ದಿದ್ದು, ಇದರ ಪರಿಣಾಮವಾಗಿ ಕೆಲವು ಸರ್ಕಾರಿ ಇಲಾಖೆಗಳಲ್ಲಿ ಮತ್ತು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ವೇತನ ವಿತರಣೆ ವಿಳಂಬವಾಗುತ್ತಿರುವ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಸಾವಿರಾರು ನಿರುದ್ಯೋಗಿ ಯುವಕರು ಉದ್ಯೋಗದ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಯಾವ ನೈತಿಕ ನೆಲೆಯಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸಾರ್ವಜನಿಕರ ಮುಂದಿರುವ ಪ್ರಮುಖ ಪ್ರಶ್ನೆಯಾಗಿದೆ ಎಂದು ಹೇಳಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಆಡಳಿತ ಪಕ್ಷದ ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವುದು ಸೂಕ್ತವಲ್ಲ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು. ಜನಪ್ರತಿನಿಧಿಗಳು ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ತರಲು ಹಾಗೂ ಜನಪರ ಯೋಜನೆಗಳನ್ನು ರೂಪಿಸಲು ಆದ್ಯತೆ ನೀಡಬೇಕಾಗಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುವುದು ದುರಾದೃಷ್ಟಕರ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ ಅಗತ್ಯತೆಗಳನ್ನು ಗಮನದಲ್ಲಿಟ್ಟು ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ, ರೇಷ್ಮೆ ಹಾಗೂ ಕೃಷಿ ಅಭಿವೃದ್ಧಿಗೆ ವಿಶೇಷ ಯೋಜನೆಗಳು, ಇಮ್ಮಾವು ಚಿತ್ರನಗರಿ ಅಭಿವೃದ್ಧಿ, ಬದನವಾಳು ಖಾದಿ ಗ್ರಾಮ ಉತ್ತೇಜನ, ನಂಜನಗೂಡು ರಸಬಾಳೆ ಬೆಳೆಗಾರರಿಗೆ ಸಹಾಯ, ಟ್ರಾಮಾ ಸೆಂಟರ್ ಸ್ಥಾಪನೆ, ಮಾನವ-ವನ್ಯಜೀವಿ ಸಂಘರ್ಷ ತಡೆ ಕ್ರಮಗಳು ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಲಾಯಿತು.
ಮುಂದಿನ ದಿನಗಳಲ್ಲಿ ಗ್ರೇಟರ್ ಮೈಸೂರು ರೂಪುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂಬುದು ಜಿಲ್ಲೆಯ ಜನರ ಪ್ರಮುಖ ಬೇಡಿಕೆಯಾಗಿದೆ ಎಂದು ಅವರು ಹೇಳಿದರು.
ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ಎಸ್. ಬಾಲಕೃಷ್ಣ, ನಾಲಾ ಬೀದಿರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಪ್ಯಾಲೇಸ್ ಬಾಬು, ಚಾಮರಾಜು, ಮಂಡಕಳ್ಳಿ ಹರೀಶ್, ಚಿನ್ನಪ್ಪ, ಶಿವುಗೌಡ, ಮಾದಪ್ಪ, ಸುನೀಲ್, ಗೋಪಿ, ಸ್ವಾಮಿ ಗೈಡ್, ಚೆಲುವರಾಯಸ್ವಾಮಿ, ಬೀಡಾ ಬಾಬು, ರಮೇಶ್, ಗೋವಿಂದರಾಜು, ಎಲ್‌ಐಸಿ ಸಿದ್ದಪ್ಪ, ಹನಕೆರೆ ಸ್ವಾಮಿ ಹಾಗೂ ರೈತ ಪರ್ವ ಅಧ್ಯಕ್ಷ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





