
ಮೈಸೂರು: – ಇತ್ತಿಚಿನ ಮಕ್ಕಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ವೇದಿಕೆ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ನಾಲ್ವಡಿ ಸೋಷಿಯಲ್, ಕಲ್ಚರಲ್ ಅಂಡ್ ಎಜುಕೇಷನಲ್ ಟ್ರಸ್ಟ್ ವತಿಯಿಂದ ಮಕ್ಕಳ ರಂಗ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಬೇಸಿಗೆ ಶಿಬಿರದ ಕುರಿತು ಹಿರಿಯ ರಂಗಕರ್ಮಿ ಬಿ.ಎಂ. ರಾಮಚಂದ್ರ ಅವರು ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಮೈಸೂರಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಏಪ್ರಿಲ್ 6ರಿಂದ ಮೇ 1ರವರೆಗೆ ನಡೆಯುವ ಈ ಶಿಬಿರವು 8 ರಿಂದ 16 ವರ್ಷ ವಯಸ್ಸಿನ ಮಕ್ಕಳಿಗೆ ವಿಶೇಷವಾಗಿ ರೂಪಿಸಲಾಗಿದೆ. ರಂಗಭೂಮಿಯ ವಿವಿಧ ಆಯಾಮಗಳನ್ನು ಪರಿಚಯಿಸುವ ಉದ್ದೇಶದಿಂದ ನಾಟಕ, ಅಭಿನಯ, ರಂಗ ಚಟುವಟಿಕೆಗಳು, ಕಥೆ ಹೇಳುವ ಕಲೆ ಹಾಗೂ ಚಿತ್ರಕಲೆ ಸೇರಿದಂತೆ ಹಲವಾರು ಸೃಜನಾತ್ಮಕ ಚಟುವಟಿಕೆಗಳನ್ನು ಶಿಬಿರದಲ್ಲಿ ಭಾಗವಹಿಸುವ ಮಕ್ಕಳಿಗೆ ತರಬೇತಿ ನೀಡಲಾಗುತ್ತದೆ.
ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮಾರ್ಚ್ 6ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ಹಿರಿಯ ರಂಗಕರ್ಮಿ ರಾಜಶೇಖರ ಕದಂಬ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ದಿನೇಶ್ ಚಮ್ಮಾಳಿಗೆ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಬೇಸಿಗೆ ಶಿಬಿರದಲ್ಲಿ ಭಾಗವಹಿಸಲು ರೂ. 3,500 ಶುಲ್ಕ ನಿಗದಿಪಡಿಸಲಾಗಿದ್ದು, ಏಪ್ರಿಲ್ 5ರಂದು ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 90715 06250 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರಾಜಶೇಖರ ಕದಂಬ, ಇತ್ತೀಚಿನ ವರ್ಷಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚು ಒಳಗಾಗುತ್ತಿರುವುದು ಚಿಂತಾಜನಕ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು. “ಮಕ್ಕಳನ್ನು ಮೊಬೈಲ್ ಚಟದಿಂದ ದೂರ ಮಾಡಿ, ಅವರಲ್ಲಿ ಸೃಜನಶೀಲತೆ ಮತ್ತು ಕಲಾತ್ಮಕತೆ ಬೆಳೆಸಲು ಇಂತಹ ಶಿಬಿರಗಳು ಅತ್ಯಂತ ಅಗತ್ಯ. ಇಲ್ಲಿ ಮಕ್ಕಳಿಗೆ ಉತ್ತಮ ಮೌಲ್ಯಗಳು ಹಾಗೂ ಜೀವನ ಕೌಶಲ್ಯಗಳನ್ನು ಕಲಿಯುವ ಅವಕಾಶ ದೊರೆಯುತ್ತದೆ” ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ದಿನೇಶ್ ಚಮ್ಮಾಳಿಗೆ, ಮಹದೇವಪ್ರಸಾದ್ ಹಾಗೂ ವಿನಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು.





