
ಮೈಸೂರು, ಫೆ.27: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ನಗರದ ಚಿಕ್ಕ ಗಡಿಯಾರ ವೃತ್ತದ ಬಳಿ ಯುವಕರು ಹಾಗೂ ಉದ್ಯೋಗಾಕಾಂಕ್ಷಿಗಳು AIDYO ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವಕರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರಿ ಇಲಾಖೆಗಳಲ್ಲಿನ ಲಕ್ಷಾಂತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ಉದ್ಯೋಗಾಕಾಂಕ್ಷಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು. ಕಳೆದ ಐದುರಿಂದ ಆರು ವರ್ಷಗಳಿಂದ ರಾಜ್ಯದಲ್ಲಿ ಸಮರ್ಪಕ ನೇಮಕಾತಿ ನಡೆಯದೇ ಇರುವುದರಿಂದ ನಿರುದ್ಯೋಗ ಸಮಸ್ಯೆ ತೀವ್ರಗೊಂಡಿದೆ ಎಂದು ಹೇಳಿದರು.

ಪ್ರತಿಭಟನಾಕಾರರು ಮಾತನಾಡಿ, ಉದ್ಯೋಗಕ್ಕಾಗಿ ವಿದ್ಯಾರ್ಥಿಗಳು ಪದೇ ಪದೇ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಹೋರಾಟದ ಫಲವಾಗಿ ಕಳೆದ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಗಳು 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಣೆ ಮಾಡಿದ್ದು, ಬೆಳಗಾವಿ ಅಧಿವೇಶನದಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ತಿಳಿಸಲಾಗಿತ್ತು. ಆದರೆ ಹಲವು ತಿಂಗಳು ಕಳೆದರೂ ನೇಮಕಾತಿ ಪ್ರಕ್ರಿಯೆ ಆರಂಭವಾಗದಿರುವುದು ನಿರಾಶೆ ಮೂಡಿಸಿದೆ ಎಂದು ಹೇಳಿದರು.
ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಸುಮಾರು 56 ಸಾವಿರ ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಸರ್ಕಾರ ತಿಳಿಸಿರುವುದಾದರೂ, ಇದು ಕೇವಲ ಘೋಷಣೆಯಾಗಿ ಉಳಿಯಬಾರದು. ತಕ್ಷಣವೇ ನೇಮಕಾತಿ ಅಧಿಸೂಚನೆ ಹೊರಡಿಸಿ ಪ್ರಕ್ರಿಯೆ ಆರಂಭಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಒಟ್ಟು 2,84,881 ಖಾಲಿ ಹುದ್ದೆಗಳಿದ್ದು, ಅವನ್ನು ಹಂತ ಹಂತವಾಗಿ ಭರ್ತಿ ಮಾಡಲು ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಜೊತೆಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು, ಭ್ರಷ್ಟಾಚಾರ ತಡೆಗಟ್ಟಬೇಕು, ನೇಮಕಾತಿಯ ವಾರ್ಷಿಕ ಕ್ಯಾಲೆಂಡರ್ ಪ್ರಕಟಿಸಬೇಕು ಹಾಗೂ ಅರ್ಜಿ ಶುಲ್ಕವನ್ನು ಕಡಿತಗೊಳಿಸಬೇಕು ಎಂದು ಆಗ್ರಹಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ಅವಕಾಶಗಳನ್ನು ಕಡಿಮೆ ಮಾಡುವ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯನ್ನು ಕೈಬಿಡಬೇಕು ಎಂಬ ಬೇಡಿಕೆಯನ್ನು ಕೂಡ ಪ್ರತಿಭಟನಾಕಾರರು ಮುಂದಿಟ್ಟರು.
ಪ್ರತಿಭಟನೆ ನಂತರ ಕಳೆದ ನವೆಂಬರ್‌ನಿಂದ ಫೆಬ್ರವರಿವರೆಗೆ ಮೈಸೂರಿನ ಯುವಕರು, ಉದ್ಯೋಗಾಕಾಂಕ್ಷಿಗಳು ಹಾಗೂ ಸಾರ್ವಜನಿಕರಿಂದ ಸಂಗ್ರಹಿಸಲಾದ 5,167 ಸಹಿಗಳಿರುವ ಮನವಿ ಪತ್ರವನ್ನು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ AIDYO ಜಿಲ್ಲಾಧ್ಯಕ್ಷ ಸುನಿಲ್ ಟಿ.ಆರ್., ಕಾರ್ಯದರ್ಶಿ ಸುಮಾ ಎಸ್., ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕಿ ನೀತು ಶ್ರೀ, ಸದಸ್ಯರಾದ ಪೂರ್ಣಿಮಾ, ರಣಜಿತ್ ಸೇರಿದಂತೆ ಉದ್ಯೋಗಾಕಾಂಕ್ಷಿಗಳಾದ ಮಹೇಶ್, ಮೋಹನ್, ರವಿಚಂದ್ರನ್, ಲೋಕೇಶ್, ಆಕಾಶ್, ಶಿವಕುಮಾರ್, ಚಂದ್ರೇಶ್, ಶಶಿಕುಮಾರ್, ಕುಮಾರ್, ರಕ್ಷಿತಾ, ಸುಶ್ಮಿತಾ ಮತ್ತಿತರರು ಭಾಗವಹಿಸಿದ್ದರು.





